ಕಲಬುರಗಿ,ಅ.30: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬರುವ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ಮನೆಯ ಮುಂದೆ ರಂಗೋಲಿ, ಹಣತೆಯ ದೀಪ ಹಚ್ಚುವ ಮೂಲಕ ಕನ್ನಡ ಪ್ರೇಮ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಅಂದು ಬೆಳಿಗ್ಗೆ ಮನೆಯ ಮುಂದೆ
ಕೆಂಪು-ಹಳದಿ ಬಣ್ಣದ ರಂಗೋಲಿಯಲ್ಲಿ
“ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂದು ವಾಕ್ಯವನ್ನು ಬಿಡಿಸಬೇಕು. ಇನ್ನು ಸಂಜೆ 7 ಗಂಟೆಗೆ ಮನೆ, ಕಚೇರಿ, ಅಂಗಡಿ-ಮುಂಗಟ್ಟುಗಳ ಮುಂದೆ ಹಣತೆ ದೀಪ ಹಚ್ಚಿ ಕನ್ನಡದ ಜ್ಯೋತಿ ಬೆಳಗಿಸಬೇಕೆಂದು ಅವರು ಕೋರಿದ್ದಾರೆ.
ಇನ್ನು ರಾಜ್ಯೋತ್ಸವ ದಿನ ಸಂಜೆ 5 ಗಂಟೆಗೆ ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮಗಳ ಮೈದಾನಗಳಲ್ಲಿ ಕೆಂಪು-ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವವನ್ನು ಆಚರಿಸಬೇಕು ಎಂದು ಡಿ.ಸಿ. ಅವರು ಜಿಲ್ಲೆಯ ಜನತೆಗೆ ಕರೆ ನೀಡಿದ್ದಾರೆ.
- Advertisement -
ಕರ್ನಾಟಕ ನಾಮಕರಣದ ಸುವರ್ಣ ಸಂದರ್ಭ ಇದಾಗಿರುವುದರಿಂದ ರಾಜ್ಯೋತ್ಸವ ದಿನಾಚರಣೆ ಅರ್ಥಪೂರ್ಣವಾಗಿ ಅಚರಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವಾಗಿದೆ. ಜಿಲ್ಲೆಯ ಎಲ್ಲಾ ಕನ್ನಡಪರ ಸಂಘಟನೆಗಳು, ಸಂಘ-ಸಂಸ್ಥೆಗಳು ರಾಜ್ಯೋತ್ಸವ ದಿನಾಚರಣೆ ಸಡಗರ ಸಂಭ್ರಮದಿಂದ ಯಶಸ್ವಿಯಾಗಿ ಜರುಗುವಂತೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ.
*ನಾಡಗೀತೆಗೆ ಗೌರವ ಸಲ್ಲಿಸಿ:*
ರಾಜ್ಯೋತ್ಸವ ದಿನದಂದು ಬೆಳಿಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುತ್ತಿದೆ. ಆ ಸಮಯದಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ ಗೌರವ ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.

