ಖನಿಜ ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಕಡ್ಡಾಯ, ಇಲ್ದಿದ್ರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿ ಡಾ.ಸುಶೀಲ ಬಿ
ಮೇ ತಿಂಗಳಿಂದ ಜುಲೈ 20 ರ ವರೆಗೆ 20 ಲಕ್ಷದ 2 ಸಾವಿರ ರೂ ವಸೂಲಿ: ಜಿಲ್ಲಾಧಿಕಾರಿ
ಸತ್ಯಕಾಮ ವಾರ್ತೆ ಯಾದಗಿರಿ:
ಜಿಲ್ಲೆಯಲ್ಲಿ ಅನಧಿಕೃತ ಮರಳು ಸಾಗಣೆ ನಡೆದಿರುವ ಮೇ ತಿಂಗಳಿಂದ ಜುಲೈ 20 ನೇ ವರೆಗೆ 44 ವಾಹನಗಳಿಗೆ ದಂಡ ವಿಧಿಸಿ 20 ಎಫ್.ಐ.ಆರ್ ದಾಖಲಿಸಿ ಒಟ್ಟು 20 ಲಕ್ಷದ 2 ಸಾವಿರ ರೂಗಳ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಮರಳು ಮಾನಿಟರಿಂಗ್ ನಿಯಂತ್ರಣ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು, ಎಲ್ಲಾ ತರಹದ ಖನಿಜ ಸಾಗಾಣಿಕೆ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಒಂದು ವೇಳೆ ಜಿಪಿಎಸ್ ಇಲ್ಲದಿರುವುದು ಕಂಡುಬಂದರೆ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಪರವಾನಗಿಯನ್ನು ರದ್ದು ಮಾಡಲಾಗುತ್ತಿದೆ. ಜಿಪಿಎಸ್ ಅಳವಡಿಕೆ ಇಲ್ಲದ ಸುಮಾರು 62 ವಾಹನಗಳಿಗೆ ದಂಡ ವಿಧಿಸಿ 6 ಲಕ್ಷದ 20 ರೂಗಳ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಕಂಡುಬಂದರೆ ಕಾನೂನಿನ ಚೌಕಟ್ಟಿನೊಳಗೆ ತಕ್ಷಣ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಸಮಪರ್ಕವಾಗಿ ನಿರ್ವಹಣೆ ಮಾಡಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಾಗಿ ಸೂಚಿಸಿದರು.
- Advertisement -
ಕಂದಾಯ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ, ಆರ್‌ಟಿಓ, ಪರಿಸರ ನಿಯಂತ್ರಣ ಮಂಡಳಿ ಹೀಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಸಂಘಟಿತವಾಗಿ ಗಸ್ತು ಮಾಡುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣ, ಸಾಗಟದ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಅಕ್ರಮ ಸಾಗಾಟದಲ್ಲಿ ಭಾಗಿಯಾಗುವ ವಾಹನಗಳನ್ನು ಆರ್‌ಟಿಓ ಮತ್ತು ಸಂಬಂಧಿಸಿದ ಅಧಿಕಾರಿಗಳು ಸೀಜ್ ಮಾಡಬೇಕು. ರಾಯಲ್ಟಿಕ್ಕಿಂತ ಹೆಚ್ಚಿನ ಟ್ರಿಪ್ ಸಾಗಾಣಿಕೆಯಾಗದಂತೆ ನಿಗಾ ವಹಿಸಬೇಕು. ಜಿಪಿಎಸ್ ಅಳವಡಿಸಿಕೊಂಡಿರುವ ಲಾರಿಗಳಿಗೆ ಮಾತ್ರ ಮರಳು ಸಾಗಣೆಗೆ ಪರ್ಮೀಟ್ ಕೊಟ್ಟು, ಅಕ್ರಮವಾಗಿ ಸಾಗಣೆ ಮಾಡಿ ನಿಯಮ ಉಲ್ಲಂಘಿಸುವ ಲಾರಿಗಳನ್ನು ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟುಕೊಂಡರೆ ಆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ತಹಶೀಲ್ದಾರು ಮತ್ತು ಪೊಲೀಸ್ ಸಿಬ್ಬಂದಿಗಳು ಕ್ರಮಕ್ಕೆ ಮುಂದಾಗಬೇಕು.
ಜಿಲ್ಲೆಯ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು. ಪರವಾನಿಗೆ, ರಾಯಲ್ಟಿ ಸೇರಿದಂತೆ ಇನ್ನಿತರ ದಾಖಲೆಗಳನ್ನು ತಪಾಸಣೆ ಮಾಡಬೇಕು. ಅತಿಭಾರದೊಂದಿಗೆ ಸಾಗುವ ವಾಹನಗಳಿಗೆ ದಂಡ ಹಾಕುವುದಲ್ಲದೇ ಎಫ್‌ಐಆರ್ ದಾಖಲಿಸಬೇಕು. ಇನ್ನು ತಾಲೂಕು ಹಂತದಲ್ಲಿಯೂ ಮರಳು ಮಾನಿಟರಿಂಗ್ ನಿಯಂತ್ರಣ ಸಮಿತಿ ಸಭೆ ನಡೆಸಬೇಕು. ಸಹಾಯಕ ಆಯುಕ್ತರ ಸಮಿತಿ ಅಕ್ರಮ ಗಣಿಗಾರಿಕೆ ನಿಯಂತ್ರಣಕ್ಕೆ ನಿಗಾ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಲೋಜ್ ಪಾಟೀಲ, ಜಿಲ್ಲಾ ವರಿಷ್ಠಾಧಿಕಾರಿ ಜಿ ಸಂಗೀತ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪೂರ್ಣಿಮಾ ಸಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಿಲಿಂದಕುಮಾರ ಸೇರಿದಂತೆ ಎಲ್ಲಾ ತಾಲೂಕಿನ ತಹಶಿಲ್ದಾರರು ಹಾಗೂ ಸಂಬಂಧಿಸಿದ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
- Advertisement -

