ಕಲಬುರ್ಗಿ, ನ.21- ರಾಜ್ಯದ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಸರ್ಕಾರದ ಪ್ರಮುಖ ಹುದ್ದೆಗಳಿಗೆ ಶಾಸಕರು ಮತ್ತು ಪಕ್ಷದ ಹಿರಿಯ ನಾಯಕರನ್ನು ನೇಮಿಸುವ ಪ್ರಸ್ತಾವನೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಅಧಿಕೃತ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ತಕ್ಷಣವೇ ನೇಮಕಾತಿ ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ.
ಈ ಮಹತ್ವದ ಪತ್ರದ ಪ್ರತಿಯನ್ನು ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೂ ರವಾನಿಸಲಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಸುದೀರ್ಘ ಸಮಾಲೋಚನೆ ನಡೆದ ಬಳಿಕ ಈ ಪಟ್ಟಿಗೆ ಅಂತಿಮ ಮುದ್ರೆ ಬಿದ್ದಿದ್ದು, ಒಟ್ಟು 18 ಶಾಸಕರು ಮತ್ತು ನಾಯಕರಿಗೆ ವಿವಿಧ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ.
ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್ ಅವರಿಗೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ, ಶ್ಯಾಮ್ ನಾಟೇಕರ್ ಅವರಿಗೆ ಕರ್ನಾಟಕ ಸಾಂಬಾರ ಪದಾರ್ಥಗಳ ಅಭಿವೃದ್ಧಿ ಮಂಡಳಿ, ಸುಭಾಷ್ ರಾಥೋಡ್ ಅವರಿಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಮಹತ್ವದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಬಸನಗೌಡ ದದ್ದಲ್ ಅವರಿಗೆ ನೇಮಿಸಲಾಗಿದೆ.
ನೂತನ ನೇಮಕಾತಿ ಪಟ್ಟಿಯಂತೆ ಪ್ರಮುಖ ನಿಗಮಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ. ಬಿ. ಶಿವಣ್ಣ ಅವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ, ಕೆ. ಷಡಕ್ಷರಿ ಅವರನ್ನು ಕರ್ನಾಟಕ ರಾಜ್ಯ ಖನಿಜಗಳ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಹಾಗೂ ಪಿ.ಎಂ. ಅಶೋಕ್ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನವನ್ನು ಎ.ಆರ್. ಕೃಷ್ಣಮೂರ್ತಿ ಅವರಿಗೆ ನೀಡಲಾಗಿದ್ದು, ಹಂಪನಗೌಡ ಬಾದರ್ಲಿ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಹೊಣೆ ವಹಿಸಲಾಗಿದೆ.
ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಅಧ್ಯಕ್ಷರಾಗಿ ಡಿ.ಜಿ. ಶಾಂತನ ಗೌಡ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಿ.ಎಚ್. ಶ್ರೀನಿವಾಸ್ ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಹಾಂತೇಶ್ ಕೌಜಲಗಿ ನೇಮಕಗೊಂಡಿದ್ದಾರೆ. ಪ್ರತಿಷ್ಠಿತ ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಸ್ಥಾನಕ್ಕೆ ಎಸ್.ಎನ್. ಸುಬ್ಬಾರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ. ಎಚ್.ಸಿ. ಲಲಿತ್ ರಾಘವ್ ಅವರಿಗೆ ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.
ನಿಗಮ ಮಂಡಳಿಗಳ ಜೊತೆಗೆ ವಿಧಾನಮಂಡಲ ಹಾಗೂ ಸರ್ಕಾರದ ಆಯಕಟ್ಟಿನ ಹುದ್ದೆಗಳಿಗೂ ಹೈಕಮಾಂಡ್ ನೇಮಕಾತಿ ಮಾಡಿದೆ. ವಿಧಾನಸಭೆಯಲ್ಲಿ ಸರ್ಕಾರದ ಮುಖ್ಯ ಸಚೇತಕರಾಗಿ ಬೇಲೂರು ಗೋಪಾಲಕೃಷ್ಣ ಮತ್ತು ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಮಂಜುನಾಥ್ ಭಂಡಾರಿ ಅವರನ್ನು ನಿಯೋಜಿಸಲಾಗಿದೆ. ಹಿರಿಯ ಶಾಸಕ ತನ್ವೀರ್ ಸೇಠ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಕೃಷಿ ಮತ್ತು ಪ್ರಾದೇಶಿಕ ಅಭಿವೃದ್ಧಿ ವಲಯಕ್ಕೆ ಸಂಬAಧಿಸಿದAತೆ ಎನ್.ಎಚ್. ಕೋನರಡ್ಡಿ ಅವರನ್ನು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷರನ್ನಾಗಿ ಹಾಗೂ ಬಸನಗೌಡ ದದ್ದಲ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಹೈಕಮಾಂಡ್ ಆದೇಶ ಹೊರಡಿಸಿದೆ.
ಕೆಕೆಆರ್‌ಡಿಬಿಗೆ ದದ್ದಲ್ ಅಧ್ಯಕ್ಷ:
ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ (ಪರಿಶಿಷ್ಟ) ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ರಾಜ್ಯದ ಸಣ್ಣ ನೀರಾವರಿ ಸಚಿವ ಡಾ. ಅಜಯಸಿಂಗ್ ಅವರಿಂದ ತೆರವಾದ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನಕ್ಕೆ ಪ್ರಥಮ ಬಾರಿಗೆ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಸಕರೊಬ್ಬರು ಅಧ್ಯಕ್ಷರಾಗಿದ್ದಾರೆ.
2013ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆಯಾದಾಗ ಎರಡು ಬಾರಿ ದಿ. ಖಮರುಲ್ ಇಸ್ಲಾಂ, ಎರಡು ಬಾರಿ ಡಾ. ಶರಣಪ್ರಕಾಶ್ ಪಾಟೀಲ್ ಅವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದಸ್ದರು. ನಂತರ ರಾಜಶೇಖರ್ ಪಾಟೀಲ್ ಹುಮ್ನಾಬಾದ್, ಬಸವರಾಜ್ ರಾಯರೆಡ್ಡಿ, ಡಾ. ಅಜಯಸಿಂಗ್ ಅವರು ಅಧ್ಯಕ್ಷರಾಗಿದ್ದರು. ಈಗ ಬಸನಗೌಡ ದದ್ದಲ್ ಅವರಿಗೆ ಆಯ್ಕೆ ಮಾಡಲಾಗಿದೆ.
ಬಸನಗೌಡ ದದ್ದಲ್ ಅವರು ಕಳೆದ 2013ರಲ್ಲಿ ಸಿದ್ಧರಾಮಯ್ಯ ಅವರ ಸರ್ಕಾರದಲ್ಲಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದಾಗ್ಯೂ, ಸಚಿವ ಸಂಪುಟಕ್ಕೆ ಸೇರುವ ಉದ್ದೇಶದಿಂದ ನಿಗಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರಲಿಲ್ಲ. ಈಗ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳುವ ಕುರಿತು ಕುತೂಹಲ ಕೆರಳಿಸಿದೆ.
ಅಲ್ಲಮಪ್ರಭು ಪಾಟೀಲ್:
ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರಿಗೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನ ಇಲ್ಲವೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅಲ್ಲಮಪ್ರಭು ಪಾಟೀಲ್ ಅವರು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೆ ಮಾತ್ರ ತೃಪ್ತಿಪಡಬೇಕಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳೂ ಆಗಿರುವ ಅಲ್ಲಮಪ್ರಭು ಪಾಟೀಲ್ ಅವರು ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿಯೂ ಸಹ ಅಪಾರ ಸೇವೆ ಸಲ್ಲಿಸಿದ್ದಾರೆ.
ಶ್ಯಾಮ್ ನಾಟೀಕಾರ್:
ಶ್ಯಾಮ್ ನಾಟೇಕರ್ ಅವರಿಗೆ ಕರ್ನಾಟಕ ಸಾಂಬಾರ ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ಲಭಿಸಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯರಾಗಿರುವ ಶ್ಯಾಮ್ ನಾಟೀಕಾರ್ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದರು. ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರದಲ್ಲಿ ಕರ್ನಾಟಕ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಹಿರಿಯ ಕಾಂಗ್ರೆಸ್ಸಿಗ ನೀಲಕಂಠರಾವ್ ಮೂಲಗೆ ಅವರಿಗೆ ನೀಡಲಾಗಿತ್ತು. ಅಫಜಲಪುರ ಶಾಸಕ ಎಂ.ವೈ. ಪಾಟೀಲ್ ಅವರ ಪುತ್ರ ಅರುಣಕುಮಾರ್ ಪಾಟೀಲ್ ಅವರಿಗೆ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನ ನೀಡಿದ್ದರಿಂದ ಅಸಮಾಧಾನಗೊಂಡು ಸಾಂಬಾರು ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ನೀಲಕಂಠರಾವ್ ಮೂಲಗೆ ಅವರು ರಾಜೀನಾಮೆ ಸಲ್ಲಿಸಿದ್ದರು. ಈಗ ಆ ಅವಕಾಶ ಶ್ಯಾಮ್ ನಾಟೀಕಾರ್ ಅವರಿಗೆ ದೊರಕಿದೆ.
ಸುಭಾಷ್ ರಾಠೋಡ್:
ಇನ್ನೇನು ರಾಜ್ಯ ವಿಧಾನ ಪರಿಷತ್ ಸದಸ್ಯರಾಗುತ್ತಾರೆ ಎಂಬ ನಿರೀಕ್ಷೆಯ ಬೆನ್ನ ಹಿಂದೆಯೇ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುಭಾಷ್ ರಾಠೋಡ್ ಅವರಿಗೆ ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈಗಾಗಲೇ ಕೋಲಿ ಸಮಾಜದಿಂದ ತಿಪ್ಪಣ್ಣಪ್ಪ ಕಮಕನೂರ್, ಈಡಿಗ ಸಮಾಜದಿಂದ ಜಗದೇವ್ ಗುತ್ತೇದಾರ್ ಕಾಳಗಿ ಅವರು ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿದ್ದು, ಲಂಬಾಣಿ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಲು ಸುಭಾಷ್ ರಾಠೋಡ್ ಅವರಿಗೆ ಪರಿಷತ್ ಸದಸ್ಯರನ್ನಾಗಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ವಲಯದಲ್ಲಿ ಬಹಿರಂಗವಾಗಿಯೇ ಕೇಳಿಬರುತ್ತಿತ್ತು. ಈಗ ಅದು ಹುಸಿಯಾಗಿ ಅವರಿಗೆ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ದೊರೆಯುವಂತಾಗಿದೆ.
ಹAಪನಗೌಡ ಬಾದರ್ಲಿ:
ಸಿಂಧನೂರು ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿರುವ ಹಿರಿಯ ಕಾಂಗ್ರೆಸ್ಸಿಗ ಹಂಪನಗೌಡ ಬಾದರ್ಲಿ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಹೊಣೆ ವಹಿಸಲಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದರಿಂದ ಅವರ ಬೆಂಬಲಿಗರು ಈ ಹಿಂದೆ ತೀವ್ರ ಪ್ರತಿಭಟನೆ ಮಾಡಿದ್ದರು. ಆದಾಗ್ಯೂ, ಈಗ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಅವರು ತೃಪ್ತಿಪಡಬೇಕಾಗಿದೆ.